ಕುಣಿಗಲ್: ಪತ್ನಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಸಮಾಧಾನಪಡಿಸಿ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ತಂದೆಯ ಹಲ್ಲೆಯಿಂದ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮೃತ ಬಾಲಕನನ್ನು ಗ್ರಾಮದ ನಂಜೇಗೌಡ (45) ಅವರ ಪುತ್ರ ಸುನಿಲ್ ಎಂದು ಗುರುತಿಸಲಾಗಿದೆ. ನಂಜೇಗೌಡ ಅವರು ಪತ್ನಿ ರಂಜಿತಾ ಅವರೊಂದಿಗೆ ಜಗಳವಾಡುತ್ತಿದ್ದ ಸಂದರ್ಭದಲ್ಲಿ ಸುನಿಲ್ ಜಗಳ ಬಿಡಿಸಲು ಮುಂದಾಗಿದ್ದಾನೆ. ಈ ವೇಳೆ ಆಕ್ರೋಶಗೊಂಡ ತಂದೆ ಕೋಲಿನಿಂದ ಮಗನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಸುನಿಲ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಧ್ಯ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆದಿದೆ ಎಂದು ತಿಳಿದುಬಂದಿದೆ.

 

ನಂಜೇಗೌಡ ಅವರಿಗೆ ಕುಶಲ್ ಎಂಬ ಮತ್ತೊಬ್ಬ ಪುತ್ರನಿದ್ದು, ಆರೋಪಿ ಮದ್ಯವ್ಯಸನಿಯಾಗಿದ್ದ ಎನ್ನಲಾಗಿದೆ. ಕುಟುಂಬದೊಳಗಿನ ಜಗಳದಲ್ಲಿ ಅಮಾಯಕ ಬಾಲಕನ ಜೀವ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ತೀವ್ರ ದುಃಖ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಮದ್ಯದ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವವರಾರು?
ಈ ದುರ್ಘಟನೆ ಕುಣಿಗಲ್ ತಾಲೂಕಿನಲ್ಲಿ ಹೆಚ್ಚುತ್ತಿರುವ ಮದ್ಯವ್ಯಸನ ಹಾಗೂ ಅಕ್ರಮ ಮದ್ಯ ಮಾರಾಟದ ದುಷ್ಪರಿಣಾಮಗಳ ಬಗ್ಗೆ ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಗ್ರಾಮೀಣ ಪ್ರದೇಶಗಳ ಸಣ್ಣಪುಟ್ಟ ಕಿರಾಣಿ ಅಂಗಡಿಗಳಲ್ಲಿಯೂ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದಾಗಿ ಅನೇಕ ಕುಟುಂಬಗಳಲ್ಲಿ ನಿತ್ಯ ಕಲಹ, ಆರ್ಥಿಕ ಸಂಕಷ್ಟ ಹಾಗೂ ಸಾಮಾಜಿಕ ಅಶಾಂತಿ ಉಂಟಾಗುತ್ತಿದೆ ಎಂದು ಸ್ಥಳೀಯ ಮಹಿಳೆಯರು ಆತಂಕ ವ್ಯಕ್ತಪಡಿಸಿದ್ದಾರೆ.
“ಮದ್ಯದ ಚಟದಿಂದ ಅನೇಕ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಕುಡಿತದ ಅಮಲಿನಲ್ಲಿ ನಡೆಯುವ ಕೌಟುಂಬಿಕ ಜಗಳಗಳು ಕೆಲವೊಮ್ಮೆ ಇಂತಹ ಭೀಕರ ಘಟನೆಗಳಿಗೆ ಕಾರಣವಾಗುತ್ತಿವೆ. ಗ್ರಾಮಗಳಲ್ಲಿ ಮದ್ಯದ ಅಂಗಡಿಗಳ ಸಂಖ್ಯೆ ಹೆಚ್ಚುತ್ತಿರುವುದರ ಜೊತೆಗೆ ಕಿರಾಣಿ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ ಹಾಕಬೇಕು. ಸಂಬಂಧಪಟ್ಟ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
ಚೌಡನಾಯಕನಪಾಳ್ಯದಲ್ಲಿ ನಡೆದ ಈ ಘಟನೆ ಮದ್ಯವ್ಯಸನದ ಕರಾಳ ಪರಿಣಾಮಗಳಿಗೆ ಮತ್ತೊಂದು ನಿದರ್ಶನವಾಗಿದೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ದುರಂತಗಳು ಮರುಕಳಿಸದಂತೆ ಸರ್ಕಾರ ಹಾಗೂ ಜಿಲ್ಲಾಡಳಿತ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

 

 

What do you feel about this post?

44%
like

Like

0%
love

Love

0%
happy

Happy

11%
haha

Haha

22%
sad

Sad

22%
angry

Angry

Leave a Reply

Your email address will not be published. Required fields are marked *