ಶಿರಾ:ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒಂದು ಸುರಕ್ಷಿತ ವ್ಯವಸ್ಥೆಯಲ್ಲಿ ಶಿಕ್ಷಣ ನೀಡಬೇಕಾಗಿರುವುದು ಸರಕಾರ ಹಾಗೂ ಜನಪ್ರತಿನಿಧಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಶಿರಾ ತಾಲ್ಲೂಕಿನಲ್ಲಿ ಸರಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ತಾಲ್ಲೂಕಿನ ಕದಿರೆಹಳ್ಳಿ ಗ್ರಾಮದಲ್ಲಿ ಬುಧವಾರ ನೂತನ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಸುಮಾರು ೩೮ ಸಾವಿರ ಸರಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ ಸುಮಾರು ಶೇ. ೩೫ ರಷ್ಟು ಸರಕಾರಿ ಶಾಲಾ ಕಟ್ಟಡಗಳು ಹಾಗೂ ಅಂಗನವಾಡಿ ಕಟ್ಟಡಗಳು ೫೦ ವರ್ಷಗಳಷ್ಟು ಹಳೇಯ ಕಟ್ಟಡಗಳಾಗಿದ್ದು, ಶಿಥಿಲಗೊಂಡಿವೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸುವ ಮೂಲಭೂತ ಅಗತ್ಯತೆಯಲ್ಲಿ ಕಟ್ಟಡವೂ ಬಹಳ ಮುಖ್ಯ ಈ ನಿಟ್ಟಿನಲ್ಲಿ ಎಲ್ಲವನ್ನು ಸರಕಾರವೇ ಮಾಡಲು ಸಾಧ್ಯವಿಲ್ಲ. ಸರಕಾರದೊಂದಿಗೆ ವಿವಿಧ ಕಾರ್ಪೋರೇಟ್ ಕಂಪನಿಗಳು ತಮ್ಮ ಸಿಎಸ್‌ಆರ್ ಅನುದಾನ ಉಪಯೊಗಿಸಿಕೊಂಡು ಶಾಲಾ ಕಟ್ಟಡಗಳನ್ನು ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿದ್ದೇನೆ. ಇದಕ್ಕೆ ಸಕಾರಾತ್ಮಕವಗಿ ಸ್ಪಂದಿಸಿದ್ದಾರೆ. ತಾಲ್ಲೂಕಿನಲ್ಲಿ ಸದ್ಯ ೧೫ ಅಂಗನವಾಡಿ ಕೇಂದ್ರಗಳನ್ನು ನೂತನವಾಗಿ ನಿರ್ಮಿಸಲು ಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಜ್ಯ ತೆಂಗು ಮತ್ತು ನಾರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಬರಗೂರು ಗ್ರಾ.ಪಂ. ಅಧ್ಯಕ್ಷ ಜಯರಾಮಯ್ಯ, ಜಿ.ಪಂ. ಮಾಜಿ ಸದಸ್ಯ ಪ್ರಕಾಶ್ ಗೌಡ, ನಾಗರಾಜ್ ಗೌಡ, ಜಗನಾಥ್, ಕದಿರೆಹಳ್ಳಿ ಮೂರ್ತಿ, ಬರಗೂರು ಸಿದ್ದಪ್ಪ, ಮೂಡಲಗಿರಿಯಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.