ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜನರ ಆತಂಕಕ್ಕೆ ಕಾರಣವಾಗಿರುವ ಚಿಕ್ಕನಹಳ್ಳಿ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಯುವಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಗಣೇಶ್.ಜಿ ಮಾತನಾಡಿ ದನ ಮೇಯಿಸಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು, ಈ ಘಟನೆಯಿಂದ ರೈತ ಮಹಿಳೆಯರು ಕೆಲಸಕ್ಕೆ ಹೋಗಲು ಹಿಂಜರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಇಲಾಖೆ ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು. ಮೃತ ಸಂತ್ರಸ್ಥೆ ಕುಟುಂಬದ ಇಬ್ಬರು ಹೆಣ್ಣು ಮಕ್ಕಳಿಗೆ ಸರ್ಕಾರದ ವತಿಯಿಂದ ಉಚಿತ ವಿದ್ಯಾಭ್ಯಾಸ ಕಲ್ಪಿಸಬೇಕು ಹಾಗೂ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಣ್ಣ ಹೆಚ್.ಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪೂಜಾಶ್ರೀ, ಉಪಾಧ್ಯಕ್ಷ ಎನ್.ವಿಜಯ್, ಸುರೇಶ್, ಸ್ವಾಮಿ, ಬಸವರಾಜು, ಸುಮ, ಭಾಗ್ಯಶ್ರೀ ಸೇರಿದಂತೆ ಇತರರಿದ್ದರು.