
ತುಮಕೂರು : ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ಗಂಭೀರ ವಿಷಯವಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿಯೂ ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ ಕಾವಲು ಸಮಿತಿ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು
ಮಕ್ಕಳ ಮಾರಾಟದ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸಬಾರದು. ಹಾಗಾಗಿ ಸಭೆಗಳನ್ನು ಹೆಸರಿಗಷ್ಟೇ ನಡೆಸಬಾರದು. ಸಭೆಯ ಉದ್ದೇಶ ಈಡೇರಬೇಕು ಎಂದು ನಿರ್ದೇಶಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಮಾತನಾಡಿ, ಜಿಲ್ಲೆಯ 330 ಗ್ರಾಮ ಪಂಚಾಯತ್‌ಗಳಲ್ಲಿಯೂ ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಣೆ ತಡೆ ಕಾವಲು ಸಮಿತಿ ರಚನೆ ಮಾಡಲಾಗಿದ್ದು, 241 ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಲಾಗಿದೆ ಎಂದು ಮಾಹಿತಿ ಒದಗಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅನೈತಿಕ ತಡೆ ಸಾಗಾಣೆ ಸೇರಿದಂತೆ ದೌರ್ಜನ್ಯಕ್ಕೊಳಪಡುವ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಸಮಸ್ಯೆಳಿಗೆ, ಪೊಲೀಸರ ಸಹಕಾರ ಅಗತ್ಯವಿದ್ದಲ್ಲಿ ಹಾಗೂ ಗೌಪ್ಯತೆ ಕಾಪಾಡುವ ಸಂಬಂಧದ ಕುರಿತು ಸಹಕಾರ ಬೇಕಾದಲ್ಲಿ ಪ್ರಾಧಿಕಾರದ ನೆರವು ಪಡೆಯುವಂತೆ ತಿಳಿಸಿದರು.
ಸಿಇಒ ಮಾತನಾಡಿ, ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಕಾಯಿದೆಯಡಿ ದಾಖಲಾದ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದೆ ಇತ್ಯರ್ಥ ಪಡಿಸಬೇಕು. ಸೂಕ್ತ ಆಪ್ತ ಸಮಾಲೋಚನೆ ಮೂಲಕ ಪ್ರಕರಣಗಳನ್ನು ಶೀಘ್ರ ಬಗಹರಿಸಬೇಕು. ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರು ಹಾಗೂ ಮಕ್ಕಳ ನೆರವಿಗೆ ಧಾವಿಸುವ ಸಹಾಯವಾಣಿ, ಸಾಂತ್ವನ ಕೇಂದ್ರ ಸೇರಿದಂತೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವಂತೆ ಸೂಚನೆ ನೀಡಿದರು.
ಭಾರತದ 75ನೇ ಸ್ವಾತಂತ್ರದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಮುಖ್ಯಮಂತ್ರಿಗಳು ಸ್ವಾತಂತ್ರ‍್ಯ ದಿನಾಚರಣೆಯಂದು ಘೋಷಿಸಿರುವ ಅಮೃತ ಯೋಜನೆಯಡಿ ಜಿಲ್ಲೆಯಲ್ಲಿ 25 ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಗುತ್ತಿಗೆ ವಹಿಸಿರುವ ಏಜೆನ್ಸಿಗಳು ಮೂಲಭೂತ ಸೌಕರ್ಯಗಳನ್ನು ಸುಸಜ್ಜಿತವಾಗಿ ಅಭಿವೃದ್ಧಿಗೊಳಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಸಾಂತ್ವನ ಕೇಂದ್ರದ ನಿರ್ವಾಹಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.