ಶಿರಾ : 390 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ಚಾಲನೆ
ಶಿರಾ : ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯು ಹರಡದಂತೆ ಜಿಲ್ಲೆಯಾದ್ಯಂತ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಿ ಎಲ್ಲಾ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಹೆಚ್ಚು ಕೋವಿಡ್ ತಗುಲುತ್ತದೆ ಎಂಬ ಆತಂಕ ಬೇಡ ಎಲ್ಲಾ ರೀತಿಯಲ್ಲಿಯೂ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಅವರು ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಿರುವ ಸುಮಾರು 80 ಲಕ್ಷ ರೂ. ಮೌಲ್ಯದ 390 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮಾರ್ಥ್ಯದ ಘಟಕ ಲೋಕಾರ್ಪಣೆ ಮಾಡಿ ಮಾತನಾಡಿದರು. ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ 390 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯಾಗಿದ್ದು, ತಾಲ್ಲೂಕಿನಲ್ಲಿ ಶಾಶ್ವತವಾಗಿ ಆಕ್ಸಿಜನ್ ಕೊರತೆ ಉದ್ಭವಿಸುವುದಿಲ್ಲ ಶಿರಾದಲ್ಲಿ ಎಂತಹುದೇ ಸಮಸ್ಯೆ ಎದುರಾದರೂ ಆಕ್ಸಿಜನ್ ಸಮಸ್ಯೆ ಉದ್ಭವಿಸುವುದಿಲ್ಲ. ಶಿರಾ ತಾಲ್ಲೂಕಿಗೆ ಮೊದಲಿಗೆ ಆಕ್ಸಿಜನ್ ಉತ್ಪಾದನಾ ಘಟಕ ಪ್ರಾರಂಭವಾಗಿದೆ ಎಂದರು.
ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ರಾಜ್ಯಾದ್ಯಂತ ಆಕ್ಸಿಜನ್ ಕೊರತೆ ಉಂಟಾಗಿತ್ತು. ಆದ್ದರಿಂದ ಮುಂದೆ ಶಿರಾ ತಾಲ್ಲೂಕಿನಲ್ಲಿ ಆಕ್ಸಿಜನ್ ಸಮಸ್ಯೆ ಉದ್ಬವವಾಗಬಾರದು ಎಂಬ ಉದ್ದೇಶದಿಂದ ವೈದ್ಯಕೀಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರ ಪರಿಣಾಮ ಪ್ರತಮವಾಗಿ ಶಿರಾ ಸರಕಾರಿ ಆಸ್ಪತ್ರೆಗೆ ಸುಮಾರು 1 ಕೋಟಿ ವೆಚ್ಚದ ನಿಮಿಷಕ್ಕೆ ಸುಮಾರು 390 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯದ ಘಟಕವನ್ನು ಮಂಜೂರು ಮಾಡಿಕೊಟ್ಟಿದ್ದಾರೆ. ತಾಲ್ಲೂಕಿನ ಜನತೆಯ ಪರವಾರಿ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತೆಂಗು ಮತ್ತು ನಾರು ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮುಖ್ಯ ಕಾರ್ಯದರ್ಶಿ ಅನಿಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಂಗೇಂದ್ರಪ್ಪ, ತಹಶೀಲ್ದಾರ್ ಮಮತ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ಶ್ರೀನಾಥ್, ಡಾ.ಡಿ.ಎಂ.ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೋಹನ್, ಡಾ.ಮಂಜುನಾಥ್, ಮಕ್ಕಳ ತಜ್ಞರಾದ ಡಾ.ಭಾರತಿ, ಮುದಿಮಡು ಮಂಜುನಾಥ್ ಮತ್ತಿತರರು ಹಾಜರಿದ್ದರು.