ತುಮಕೂರು: ಜಿಲ್ಲೆಯಲ್ಲಿ ಪ್ರತೀ ಸಭೆಯಲ್ಲಿಯೂ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕೆಂದು ಹಲವಾರು ಬಾರಿ ನಿರ್ದೇಶನ ನೀಡಿದರೂ ಸಹ ಕ್ರಮ ಕೈಗೊಳ್ಳದೆ ನಿರ್ಲಕ್ಷತೆ ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಬೇರೆ ಜಿಲ್ಲೆಗಳಲ್ಲಿ ಶೇ. 100ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಸಿಕಾಕರಣವಾಗುತ್ತಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಲಸಿಕಾಕರಣದಲ್ಲಿ ಶೇ.100ರಷ್ಟು ಗುರಿ ಸಾಧಿಸದಿರಲು ತೊಂದರೆಯೇನು? ಪ್ರತಿ ವೀಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆ ನೀಡಿದರೂ ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಬೇಸರಿಸಿದ ಅವರು, ಇನ್ನು 3 ದಿನಗಳೊಳಗೆ ಲಸಿಕಾಕರಣ ಪೂರ್ಣಗೊಳಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾದ್ಯಂತ ಬುಧವಾರದಿಂದ ಶುಕ್ರವಾರದವರೆಗೆ ಲಸಿಕಾ ಅಭಿಯಾನ ನಡೆಸಿ ಬಾಕಿ ಇರುವ ಮೊದಲ ಹಾಗೂ ಎರಡನೇ ಡೋಸ್ ಲಸಿಕಾಕರಣವನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ನಂತರ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರಲ್ಲದೆ, ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಸೂಚನೆ ನೀಡಿದರು.
ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ, ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳ ತಂಡ ರಚಿಸಿ ಸ್ಥಳ ಪರಿಶೀಲನೆ ಮಾಡಿ ಮತಗಟ್ಟೆವಾರು ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಶೀಲಿಸಿ ಲಸಿಕೆ ಪಡೆಯುವವರ ಪಟ್ಟಿ ಮಾಡಿ ಅರ್ಹರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ಲಸಿಕಾಕರಣದಲ್ಲಿ ತೀರಾ ಹಿಂದುಳಿದಿರುವ ಪಾವಗಡ ತಾಲ್ಲೂಕಿನಲ್ಲಿ ಶೇ. 100ರಷ್ಟು ಪೂರ್ಣಗೊಳಿಸಲು ಶಿಕ್ಷಣ ಹಾಗೂ ಕಂದಾಯ ಇಲಾಖೆಯವರು ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದರಲ್ಲದೆ, ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುವ ಕಂದಾಯ, ಆರೋಗ್ಯ, ಪೊಲೀಸ್, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಮುಂಚೂಣಿ ಕಾರ್ಯಕರ್ತರು 2ನೇ ಡೋಸ್ ಪಡೆದು 90 ದಿನಗಳು ಪೂರ್ಣಗೊಂಡಿದ್ದರೆ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕೆಂದು ಸೂಚಿಸಿದರು.
ಕೋವಿಡ್ ಸೋಂಕು ದೃಢಪಟ್ಟ ರೋಗಿಗಳಿಗೆ ನೀಡಲು ಅನುವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ಗೆ ಸಂಬಂಧಿಸಿದ ಔಷಧಿಗಳನ್ನು ದಾಸ್ತಾನು ಇಟ್ಟಿರಬೇಕು. ಸೋಂಕಿತರಿಗೆ ಔಷಧಿ ಕೊರತೆಯಾಗದಂತೆ ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ನಗರ ವ್ಯಾಪ್ತಿಯಲ್ಲಿ ಬಿಲ್ ಕಲೆಕ್ಟರ್‌ಗಳು ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರಲ್ಲದೆ, ಪ್ರತಿ 100 ಸೋಂಕಿತರಲ್ಲಿ ಒಬ್ಬರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಔಷಧಿ ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಲಾಗುವುದು. ಸೋಂಕಿತರಿAದ ದೂರುಗಳು ಬಂದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಲಾ ಮಕ್ಕಳಲ್ಲಿ ಕೋವಿಡ್ ಸೋಂಕಿನ ಗುಣ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ತಿಳಿ ಹೇಳಿ ಮಕ್ಕಳನ್ನು ಪೋಷಕರೊಂದಿಗೆ ಮರಳಿ ಕಳುಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಇಂದಿನಿಂದಲೇ ಕೋವಿಡ್ ವಾರ್ ರೂಂ/ ಕಂಟ್ರೋಲ್ ರೂಂಗಳನ್ನು ತೆರೆದು ಹೋಂ ಐಸೋಲೇಷನ್ ಇರುವ ಸೋಂಕಿತರ ಆರೋಗ್ಯ ಕ್ಷೇಮವನ್ನು ವಿಚಾರಿಸಬೇಕು ಎಂದು ಸಂಬಂಧಿಸಿದವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ, ಜಿಲ್ಲಾ ಶಸ್ತçಚಿಕಿತ್ಸಕ ಡಾ: ವೀರಭದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಮೋಹನ್ ದಾಸ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ: ಕೇಶವರಾಜ್, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಆರೋಗ್ಯಾಧಿಕಾರಿ ಡಾ: ರಕ್ಷಿತ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.