ಕುಣಿಗಲ್ : ವಿವಿಧ ಸರ್ಕಾರಿ ಶಾಲೆಗಳಿಗೆ ಅಲ್ಪಸಂಖ್ಯಾತ ಶಿಕ್ಷಣ ಇಲಾಖೆ ನಿರ್ದೇಶಕಿ ಲಲಿತಾ ಚಂದ್ರಶೇಖರ ಭೇಟಿ ನೀಡಿ ಶಾಲೆಯಲ್ಲಿರುವ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದ್ದಾರೆ.
ತಾಲ್ಲೂಕಿನ ಯಡಿಯೂರು ಹೋಬಳಿ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗಡಿಪಾಳ್ಯ (ಕೊಪ್ಪ) ಸರ್ಕಾರಿ ಪ್ರೌಢಶಾಲೆಗೆ ನಿರ್ದೇಶಕಿ ಭೇಟಿ ನೀಡಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಪರಿಶೀಲನೆ ವೇಳೆ ಶಾಲೆಯಲ್ಲಿ ಅಡುಗೆ ಕೊಠಡಿ ನಿರ್ಮಾಣ ಮಾಡದೇ ಇರುವುದು ಕಂಡು ಹಾಗೂ ಇನ್ನೂ ಶಾಲೆಯ ಕಾಂಪೌಂಡ್ ಕಾಮಗಾರಿ ಅಪೂರ್ಣವಾಗಿರುವುದನ್ನು ಗಮನಿಸಿದ್ದಾರೆ. ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಚಾರ್ ರವರಿಂದ ಸಂಪೂರ್ಣ ಮಾಹಿತಿ ಪಡೆದು ಕೆಲವು ಸಲಹೆ ಸೂಚನೆಗಳನ್ನು ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ನಂತರ ಪಕ್ಕದಲ್ಲೇ ಇದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಬೇಕಾಗಿರುವ ಮೂಲಭೂತ ಸೌಕರ್ಯ ಹಾಗೂ ಶಾಲಾ ಕಾಂಪೌಂಡ್ ವಿಚಾರವಾಗಿ ಚರ್ಚೆ ನಡೆಸಿ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದು ನಂತರ ಕಂಠನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕಾಂಪೌಂಡ್ ಹಾಗೂ ಶಾಲಾ ಕಟ್ಟಡವನ್ನು ಪರಿಶೀಲನೆ ನಡೆಸಿ ಸ್ಥಳದಿಂದಲೇ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೆ ಜೋಸೆಫ್ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸರ್ಕಾರಿ ಶಾಲೆಗಳಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ಚರ್ಚಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಶಾಲೆಗಳಿಗೆ ಭೇಟಿ ಕೊಟ್ಟ ವೇಳೆ ನಿರ್ದೇಶಕರು ಮಕ್ಕಳ ಕಲಿಕೆಯ ಬಗ್ಗೆ ಪರಿಶೀಲಿಸಿ ಶಿಕ್ಷಕರು ಪ್ರಾಮಾಣಿಕವಾಗಿ ಮಕ್ಕಳ ಕಲಿಕೆಯ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಲಹೆ ನೀಡಿದ್ದಾರೆ. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಕೆಲವು ಮಾಹಿತಿಗಳನ್ನು ಪಡೆದಿದ್ದಾರೆ. ಮೂಲಗಳ ಪ್ರಕಾರ ಮಾನವ ಹಕ್ಕುಗಳ ಹೋರಾಟಗಾರರಾದ ಸಿದ್ದಲಿಂಗೇಗೌಡರು ರಾಜ್ಯದ ಕೆಲವು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಇನ್ನಿತರೆ ಸೌಕರ್ಯಗಳಿಲ್ಲ ಎಂದು ಲೋಕಾಯುಕ್ತರಿಗೆ ಸುಮಾರು ವರ್ಷಗಳ ಹಿಂದೆ ದೂರು ಸಲ್ಲಿಸಿದ್ದರು ಈ ಸಂಬಂಧ ಲೋಕಾಯುಕ್ತರು ಶಿಕ್ಷಣ ಇಲಾಖೆ ಆಯುಕ್ತರಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದ ಹಿನ್ನೆಲೆ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ವರದಿ ನೀಡುವಂತೆ ರಾಜ್ಯಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ನಿರ್ದೇಶಕರು ಶಾಲೆಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು.ರಾಜ್ಯ ಮಾನವ ಹಕ್ಕುಗಳ ಹೋರಾಟಗಾರರಾದ ಸಿದ್ದಲಿಂಗೇಗೌಡ ಹಾಜರಿದ್ದರು.