ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ
ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಪರಸ್ಪರ ಹಬ್ಬದ ಶುಭಾಶಯ, ಸಾಮೂಹಿಕ ಪ್ರಾರ್ಥನೆ

ತುಮಕೂರು : ಮುಸ್ಲಿಂ ಬಾಂಧವರ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸೇರಿದ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಈದ್ಗಾ ಮೈದಾನಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಡಿವೈಎಸ್ಪಿ ಶ್ರೀನಿವಾಸ್ ಅವರು ಭೇಟಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ದೇಶಾದ್ಯಂತ ಬಕ್ರೀದ್ ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸುತ್ತಾ ಬರಲಾಗುತ್ತಿದೆ. ಎಲ್ಲ ಮುಖಂಡರು, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರುವುದಾಗಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್ ಮಾತನಾಡಿ, ಎಲ್ಲ ಮುಸ್ಲಿಂ ಬಾಂಧವರಿಗೆ ಪೊಲೀಸ್ ಇಲಾಖೆ ವತಿಯಿಂದ ಬಕ್ರೀದ್ ಹಬ್ಬದ ಶುಭಕೋರುವುದಾಗಿ ಹೇಳಿದರು.
ಮಾಜಿ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ನಾಡಿನ ಕಾನೂನನ್ನು ಗೌರವಿಸಿ ನಾವೆಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಿಂದೂ, ಕ್ರೆöÊಸ್ತ, ಮುಸ್ಲಿಂ ಎಲ್ಲರೂ ಒಗ್ಗಟ್ಟಾಗಿ ದೇಶದ ಐಕ್ಯತೆಗಾಗಿ ಸಂಕಲ್ಪ ಮಾಡಿ ದುಡಿಯೋಣ, ಒಗ್ಗಟ್ಟಾಗಿ ಇರೋಣ ಎಂದು ಕರೆ ನೀಡಿದರು.
ನಾಡಿನಾದ್ಯಂತ ಮುಸ್ಲಿಂ ಬಾಂಧವರ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕಳೆದ 2 ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಕೋವಿಡ್ ಮಹಾಮಾರಿಯ ಆರ್ಭಟ ಇಳಿಮುಖವಾಗಿರುವುದರಿಂದ ಜಿಲ್ಲೆಯಲ್ಲಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾವೆಲ್ಲರೂ ಶಾಂತಿ-ಸೌಹಾರ್ದತೆಯಿಂದ ಬಾಳ್ವೆ ನಡೆಸಲಾಗುತ್ತಿದೆ ಎಂದರು.
ಮುಖಂಡರಾದ ಇಕ್ಬಾಲ್ ಅಹಮದ್ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಡವರಿಗೆ, ನಿರ್ಗತಿಕರಿಗೆ ದಾನ, ಧರ್ಮ ಮಾಡಲು ಅವಕಾಶ ಮಾಡಿಕೊಡುವುದೇ ಬಕ್ರೀದ್ ಹಬ್ಬದ ವಿಶೇಷತೆ. ಎಲ್ಲರೂ ಕೂಡಿ ಸಮಾನತೆಯಿಂದ ಬಾಳಲು, ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ ಈ ಬಕ್ರೀದ್ ಹಬ್ಬ ಎಂದರು.
ಬಕ್ರೀದ್ ಹಬ್ಬವು ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಎಲ್ಲರೂ ಕೂಡಿ ಬಾಳುವಂತಾಗಲಿ ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಹಾಗೂ ಡಿವೈಎಸ್ಪಿ ಶ್ರೀನಿವಾಸ್ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ. ಎಸ್. ಷಫಿಅಹಮದ್ ಮತ್ತಿತರರು ಪಾಲ್ಗೊಂಡಿದ್ದರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತುಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.