ಕೊರಟಗೆರೆ ತಾಲ್ಲೂಕಿಗೆ ಜಿ.ಪಂ. ಸಿಇಓ ಡಾ. ಕೆ. ವಿದ್ಯಾಕುಮಾರಿ ದಿಢೀರ್ ಭೇಟಿ : ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಕೊರಟಗೆರೆ : ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿರವರು ಇಂದು ಏಕಾಏಕಿ ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಮೃತ್ ಸರೋವರ ಕಾಮಗಾರಿಗಳನ್ನು ವೀಕ್ಷಿಸಿ, ನಿಗಧಿತ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರಟಗೆರೆ ತಾಲ್ಲೂಕಿನ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಗನಪಾಳ್ಯ ಗ್ರಾಮದ ಸರ್ವೆ ನಂಬರ್ 45ರ ಸರ್ಕಾರಿ ಜಾಗದಲ್ಲಿ ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಅಮೃತ ಸರೋವರ ಕೆರೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಬಳಿಕ ಅಲ್ಲಿಯೇ ಪಕ್ಕದಲ್ಲಿದ್ದ ತೀತಾ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿಯನ್ನು ವೀಕ್ಷಿಸಿ, ಕಟ್ಟದ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಹಸಿ ಕಸ, ಬಣ ಕಸವನ್ನು ವಿಂಗಡಣೆ ಮಾಡುವ ಪ್ರಕ್ರಿಯೆ ಪ್ರಾರಂಭಿಸುವಂತೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತೀತಾ ಗ್ರಾ.ಪಂ. ಪಿಡಿಓ ರಮೇಶ್ ರವರಿಗೆ ಸೂಚನೆ ನೀಡಿದರು.
ಬಳಿಕ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದರು. ಇದೇ ವೇಳೆ ಪಕ್ಕದಲ್ಲಿಯೇ ಇದ್ದಂತಹ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಸ್ಪರ್ದಾತ್ಮಕ ಪುಸ್ತಕಗಳು ಹಾಗೂ ಡಿಜಿಟಲ್ ಸೌಲಭ್ಯಗಳನ್ನು ಕಲ್ಪಿಸಲು ಸಲಹೆ ನೀಡಿದರು.
ಆ ನಂತರ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಡ್ರಹಳ್ಳಿ ಗ್ರಾಮದಲ್ಲಿ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿ ಪಡಿಸುತ್ತಿರುವ ಗೊಡ್ರಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು. ಇದೇ ವೇಳೆ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರನ್ನು ಮಾತನಾಡಿಸಿ, ಹೆಚ್ಚು ಹೆಚ್ಚು ನರೇಗಾ ಕೆಲಸಗಳಲ್ಲಿ ಭಾಗವಹಿಸುವಂತೆ ಕೂಲಿ ಕಾರ್ಮಿಕರಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ(ಅಭಿವೃದ್ಧಿ) ಅಥಿಕ್ ಪಾಷ, ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ದೊಡ್ಡಸಿದ್ದಯ್ಯ, ಸಹಾಯಕ ನಿರ್ದೇಶಕ (ಗ್ರಾ.ಉ.)ರಾದ ಬಿ.ಎಸ್. ಕುಮಾರಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳು ಹಾಜರಿದ್ದರು.