75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ : ಮನೆ-ಮನಗಳಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಸೈಕ್ಲೋಥಾನ್ ವಿಶೇಷ ಕಾರ್ಯಕ್ರಮ
ತುಮಕೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಸೈಕ್ಲೋಥಾನ್ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ, ಬಿ.ಜಿ.ಎಸ್. ವೃತ್ತ, ಶಿವಕುಮಾರಸ್ವಾಮಿ ವೃತ್ತ, ಭದ್ರಮ್ಮ ವೃತ್ತದ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೂ ಸಂಚರಿಸಿದ ಸೈಕ್ಲೋಥಾನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 75ನೇ ಆಜಾದಿ ಕಾ ಅಮೃತ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿನೂತನ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯ 4.5 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಉದ್ದೇಶವನ್ನು ಹೊಂದಲಾಗಿತ್ತು. ಆದರೆ 5 ಲಕ್ಷಕ್ಕೂ ಹೆಚ್ಚಿನ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರದ ಮೇಲೆ ಜನರು ಅಭಿಮಾನ ತೋರಿದ್ದಾರೆ. ಅಭಿಮಾನ ತೋರಿದ ದೇಶಪ್ರೇಮಿಗಳಿಗೆ ಅಭಿನಂದನೆ ಸಲ್ಲಿಸಿದರು.
ಸ್ವಾತಂತ್ರ್ಯದಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ವಿಶೇಷವಾಗಿ ಜಿಲ್ಲಾದ್ಯಂತ 15 ಹೊಸಕೆರೆಗಳ ಬಳಿ ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ಸ್ಥಳಿಯ ಗಣ್ಯರಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ ಮಾತನಾಡುತ್ತಾ, 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಮೃತ ಮಹೋತ್ಸವದ ಸವಿನೆನಪಿಗಾಗಿ ವಾಕಥಾನ್, ಸೈಕ್ಲೋಥಾನ್ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ನಿರ್ಮಿತಿ ಕೇಂದ್ರ ರಾಜಶೇಖರ್, ಡಿಡಿಪಿಐ ಸಿ. ನಂಜಯ್ಯ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ, ವಿವಿಧ ಶಾಲಾ ವಿದ್ಯಾರ್ಥಿಗಳು, ನಾಗರಿಕರು ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್‌ನಲ್ಲಿ ಸಂಚರಿಸುವ ಮೂಲಕ ಜನರಲ್ಲಿ ರಾಷ್ಟçಪ್ರೇಮವನ್ನು ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ, ಪಾಲಿಕೆ ಆಯುಕ್ತೆ ರೇಣುಕಾ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ, ಡಿವೈಎಸ್‌ಪಿ ಡಿಎಆರ್ ಪರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ, ತುಮಕೂರು ಸೈಕ್ಲಿನ್ ಪ್ರತಿನಿಧಿ ಕ್ಲಬ್ ಚಿರಾಗ್ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಗದುದ್ದಕ್ಕೂ “ಬೋಲೋ ಭಾರತ್ ಮಾತಾಕೀ”, “ಜೈ ಜವಾನ್-ಜೈ ಕಿಸಾನ್”, “ವಂದೇ ಮಾತರಂ”, ಎಂದು ದೇಶಪ್ರೇಮದ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಸೈಕ್ಲೋಥಾನ್ ಜಾಥಾ ಕಾರ್ಯಕ್ರಮವು ನೋಡುಗರನ್ನು ಆಕರ್ಷಿಸಿತು.