
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಚುನಾವಣೆಯಲ್ಲಿ ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು 7,897 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು ಕೇವಲ 1,072 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
22 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗಾಂಧಿ ಕುಟುಂಬದ ಸದಸ್ಯರಲ್ಲದವರು ಆಯ್ಕೆಯಾಗಿರುವುದು ಪಕ್ಷಕ್ಕೆ ಹೊಸ ಹುರುಪು ನೀಡಲಿದೆ ಎಂಬ ಮಾತುಗಳೂ ಕೇಳಿ ಬಂದಿದೆ.
ಅಕ್ಟೋಬರ್ 17ರಂದು ನಡೆದಿದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಒಟ್ಟು 9,915 ಪ್ರತಿನಿಧಿಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದರು. ದೇಶದಾದ್ಯಂತ 65 ಮತಕೇಂದ್ರಗಳಲ್ಲಿ ಪ್ರತಿನಿಧಿಗಳು ಮತ ಚಲಾವಣೆ ಮಾಡಿದ್ದರು. 416 ಮತಗಳು ತಿರಸ್ಕೃತವಾಗಿವೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಏಣಿಕೆ ಪ್ರಕ್ರಿಯ ನಡೆದಿದೆ.
6,897 ಮತಗಳ ಅಂತರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಅವರನ್ನು ಸೋಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಹರುಪು ನೀಡಿದೆ. ವಿಜಯೋತ್ಸವ ಆಚರಣೆಯು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು 3 ಗಂಟೆಗೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.