ತುಮಕೂರು : ಅಖಿಲ ಭಾರತೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರುಗಳು ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂಭ್ರಮಾಚರಣೆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ಕರ್ನಾಟಕಕ್ಕೆ ತುಂಬಾ ಹೆಮ್ಮೆ ತಂದಿದೆ ಎಂದರು.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು 2ನೇ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಖರ್ಗೆಯವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಜಯಭೇರಿ ಭಾರಿಸಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.
ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು 9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಶಿಸ್ತಿನ ಸಿಪಾಯಿ ಆಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರ ಸುದೀರ್ಘ ಪಕ್ಷ ನಿಷ್ಠ ಸೇವೆಗೆ ಪಕ್ಷದ ಅತ್ಯುನ್ನತ ಸ್ಥಾನವಾದ ಎಐಸಿಸಿ ಅಧ್ಯಕ್ಷ ಪಟ್ಟ ದೊರೆತಿದೆ ಎಂದರು.
ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದರೆ ಎಲ್ಲರಿಗೂ ಒಂದಲ್ಲಾ ಒಂದು ಹುದ್ದೆ ಸಿಕ್ಕೇ ಸಿಗುತ್ತದೆ ಎನ್ನುವುದಕ್ಕೆ ಖರ್ಗೆ ಅವರೇ ಉದಾಹರಣೆ ಎಂದು ಅವರು ಹೇಳಿದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಜೆ. ಕುಮಾರ್ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿರುವುದು ನಮಗೆಲ್ಲ ತುಂಬಾ ಸಂತಸ ತಂದಿದೆ. ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಗೆಲುವಿಗೆ ಖರ್ಗೆಯವರ ಆಯ್ಕೆ ದಿಕ್ಸೂಚಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಮೆಹಬೂಬು ಪಾಷ ಮಾತನಾಡಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿ ತುಮಕೂರು ಜಿಲ್ಲೆಗೆ ತುಂಬಾ ಸಂತಸ ತಂದಿದೆ. ಸುದೀರ್ಘ ರಾಜಕಾರಣದಲ್ಲಿ ಯಾವುದೇ ಜಾತಿ, ಭೇದ ಇಲ್ಲದೆ ರಾಜಕಾರಣ ಮಾಡಿಕೊಂಡು ಎಲ್ಲರಿಗೂ ಸಮಾನತೆ ನೀಡುತ್ತಿರುವ ಹಿರಿಯ ನಾಯಕರು ಖರ್ಗೆ ಅವರು ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತಾ ಇದುವರೆಗೂ ಯಾವುದೇ ಕಾರ್ಯಕರ್ತರಿಗಾಗಲೀ, ನಾಯಕರಿಗಾಗಲೀ ಕಿಂಚಿತ್ತೂ ನೋವು ಆಗದಂತೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಾ ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ದೊರೆತಿರುವುದು ರಾಷ್ಟçದಲ್ಲಿ ಮುಂದಿನ ಚುನಾವಣೆಗಳ ಗೆಲುವಿನ ರಹದಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ನಯಾಜ್ ಅಹಮದ್, ನಗರಸಭೆ ಮಾಜಿ ಸದಸ್ಯ ಅಸ್ಲಾಂಪಾಷ, ಮೆಹಬೂಬು ಪಾಷ, ಅಫ್ತಾಬ್, ಪುಟ್ಟರಾಜು, ನಾಸೀರಬಾನು, ಮಂಜುನಾಥ್, ನಟರಾಜಶೆಟ್ಟಿ, ಪ್ರಕಾಶ್, ಶಿವಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.