ಶಿರಾ : ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು ಶ್ರಮಿಸುತ್ತೇವೆ. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಮಾಡಬೇಕಾಗುತ್ತದೆ. ಆದ್ದರಿಂದ ಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಮಮತ ಹೇಳಿದರು.
ಅವರು ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ದೊಡ್ಡ ಅಗ್ರಹಾರ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ ಜಾರಿಗೊಳಿಸಿದ್ದು, ಜನರು ಕೇವಲ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನರು ಸಮಸ್ಯೆಗಳನ್ನು ಕೇಳದೆ ಎಲ್ಲಾ ಇಲಾಖೆಗಳ ಸಮಸ್ಯೆಗಳಿಗೂ ಪರಿಹಾರ ಪಡೆಯಬಹುದು. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅಕ್ರಮ ಮದ್ಯ ಮಾರಾಟ ಮಾಡುವವರ ಬಗ್ಗೆ ಸಾರ್ವಜನಿಕರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಫಲಾನುಭವಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಂದಾಯ ಇಲಾಖೆಯಲ್ಲಿ ಸುಮಾರು 15 ರಿಂದ 20 ವರ್ಷಗಳಿಂದ ಬಾಕಿ ಇದ್ದ ಬಗರ್ ಹುಕುಂ ಕಡತಗಳನ್ನು ವಿಲೇವಾರಿ ಮಾಡಿ ಖಾತೆ ಮಾಡಿ ಪಹಣಿ, ಎಂ.ಆರ್. ದಾಖಲು ಮಾಡಿಕೊಡಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ 112 ಜನರಿಗೆ ಪಿಂಚಣಿ ಆದೇಶ ಪತ್ರ ನೀಡಲಾಗಿದೆ. 98 ಫಲಾನುಭವಿಗಳಿಗೆ ಬಗರ್ ಹುಕುಂ ಸಾಗುವಳಿ ನೀಡಲಾಗಿದೆ, 20 ಜನರಿಗೆ ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಕರಿಯಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಗ್ರೇಡ್-2 ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.