ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.
ಖಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಯ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯಕ್ಕೆ ಅವಕಾಶವಿಲ್ಲ. ಮಾತನಾಡಲು ಧೈರ್ಯವಿರುವವರನ್ನು ಜೈಲಿಗೆ ತಳ್ಳಲಾಗುತ್ತಿದೆ ಎಂದು ಆಪಾದಿಸಿದ್ದಾರೆ.
2014ರಲ್ಲಿ ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಮತ್ತು ಬಡತನ ಹೆಚ್ಚುತ್ತಿದೆ ಎಂದು ಹೇಳಿದರು.
ದೇಶದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್ ನಾಯಕರು ಎಂದು ಖರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷದ 60 ದಿನಗಳ ಹಾಥ್ ಸೆ ಹಾಥ್ ಜೋಡೋ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಅವರು ಮಾತನಾಡಿದರು.
ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.