ತುಮಕೂರು : ಭಾರತ ಚುನಾವಣಾ ಆಯೋಗದ ಆಶಯದಂತೆ ಮೇ 10ರಂದು ನಡೆಯುವ ಮತದಾನದ ದಿನದಂದು ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ವತಿಯಿಂದ ಭಾನುವಾರ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಬಳಿ ಮತದಾನದ ಕುರಿತು ಮತದಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಪೌರಾಣಿಕ, ಐತಿಹಾಸಿಕ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಪ್ರವಾಸೋಧ್ಯಮ ಇಲಾಖೆಯಿಂದ ಆ ಸ್ಥಳಗಳನ್ನು ಅಭಿವೃದ್ದಿ ಪಡಿಸಲಾಗಿದೆ, ಪ್ರವಾಸಿ ತಾಣಗಳನ್ನು ಉಳಿಸುವುದಕ್ಕಾಗಿ ಅಲ್ಲಿ ಸ್ವಚ್ಚತೆ ಕಾಪಾಡುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಮೇ 10ರಂದು ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನದ ಕುರಿತು ಮತದಾರರಿಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಾದ್ಯಂತ ಸ್ವೀಪ್ ಚಟುವಟಿಕೆಗಳು ನಡೆಯುತ್ತಿವೆ. ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಇಂದು ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಸೇರಿ ಪ್ರವಾಸಿ ತಾಣವಾದ ರಾಮದೇವರ ಬೆಟ್ಟವನ್ನು ಚಾರಣ ಮಾಡಲಾಗುವುದು ಎಂದರು.
ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಮತವನ್ನು ಚಲಾಯಿಸಬೇಕು. ಮೇ 10ರಂದು ನಡೆಯುವ ಮತದಾನದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಮಾಡಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕ ರಘು, ಜಿಲ್ಲಾ ನಿರ್ಮಿತಿ ಕೇಂದ್ರದ ರಾಜಶೇಖರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಅಥಿಕ್ ಪಾಷ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಅಭಿಯಂತರ ರವೀಶ್, ಸ್ವೀಪ್ ಸಮಿತಿ ಸಹಾಯಕ ನೋಡೆಲ್ ಅಧಿಕಾರಿ ಜಿ. ಆರ್. ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಯಪಾಲ್, ತಾಲೂಕ್ ಪಂಚಾಯತ್ ಎಡಿ ಮಂಜುನಾಥ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.