ಜಿಲ್ಲೆತುಮಕೂರುರಾಜಕೀಯ

ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್

ತುಮಕೂರು : ಸರ್ಕಾರಿ ಅಧಿಕಾರಿ/ನೌಕರರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿ/ನೌಕರರು ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಬೇಕು. ಯಾವುದೇ ಪಕ್ಷ/ಅಭ್ಯರ್ಥಿಗಳೊಂದಿಗೆ ಗುರುತಿಸಿಕೊಳ್ಳಬಾರದು. ತಪ್ಪಿದಲ್ಲಿ ಅಂಥವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಿದರು.
ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಪ್ಪದೇ ಮತದಾನ ಮಾಡುವ ಬಗ್ಗೆ ಮತದಾರರಿಗೆ ಅರಿವು ಮೂಡಿಸಬೇಕು. ಅರಿವು ಮೂಡಿಸುವ ಸಂದರ್ಭದಲ್ಲಿ ಮತ ಚಲಾಯಿಸಬೇಕೆಂದು ಹೇಳಬೇಕೇ ಹೊರತು ನಿರ್ಧಿಷ್ಟ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕೆಂದು ಹೇಳುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾದ್ಯಂತ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿ/ ಸಿಬ್ಬಂದಿಗೆ ಏಪ್ರಿಲ್ 11ರಂದು ಚುನಾವಣಾ ತರಬೇತಿ ನೀಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರಲ್ಲದೆ, ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟ ಮತದಾರರಿಗೆ ನಮೂನೆ-12ಡಿ ವಿತರಣೆ ಮಾಡಿರುವ ಬಗ್ಗೆ ಇಐಇಅಖಿಔಓಇ ತಂತ್ರಾಂಶದಲ್ಲಿ ಪ್ರತಿದಿನ ಅಪ್‌ಡೇಟ್ ಮಾಡಬೇಕು. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 7845 ಅರ್ಹ ಮತದಾರರ ಪೈಕಿ ಈಗಾಗಲೇ 6794 ಮತದಾರರಿಗೆ ನಮೂನೆ-12ಡಿ ವಿತರಣೆ ಮಾಡಿರುವ ಮಾಹಿತಿಯನ್ನು ಇಐಇಅಖಿಔಓಇ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಉಳಿದ ವಿಧಾನಸಭಾ ಕ್ಷೇತ್ರಗಳಲ್ಲೂ ಸಹ ನಿಗಧಿತ ಅವಧಿಯೊಳಗೆ ನಮೂನೆ-12ಡಿ ಯನ್ನು ವಿತರಿಸಿ ಆದಷ್ಟು ಬೇಗ ತಂತ್ರಾಂಶದಲ್ಲಿ ಅಪ್‌ಡೇಟ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.
ಮತದಾರರ ಪಟ್ಟಿಗೆ ಅರ್ಹ ಮತದಾರರ ಹೆಸರು ಸೇರ್ಪಡೆ/ತೆಗೆದು ಹಾಕುವುದು/ ಸ್ಥಳಾಂತರ/ತಿದ್ದುಪಡಿ ಸೇರಿದಂತೆ ಸ್ವೀಕೃತವಾಗಿರುವ ಅರ್ಜಿ ನಮೂನೆ 6, 7, 8ನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರ ವಿಲೇವಾರಿ ಮಾಡಬೇಕು. ಏಪ್ರಿಲ್ 11ರವರೆಗೆ ಸ್ವೀಕರಿಸಿದ ಅರ್ಜಿಗಳನ್ನು 7 ದಿನಗಳ ಅವಧಿ ಮೀರದಂತೆ ತಪ್ಪದೇ ವಿಲೇವಾರಿ ಮಾಡಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಜಾತ್ರೆ ನಡೆಯುತ್ತಿದ್ದು, ಜಾತ್ರೆ ನಡೆಸಲು ದೇವಾಲಯದಿಂದ ಮನವಿ ಸ್ವೀಕರಿಸಿದ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳ ಬಗ್ಗೆ ದೇವಾಲಯದ ಮುಖ್ಯಸ್ಥರಿಗೆ ತಿಳಿಸಬೇಕು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ದೇವಾಲಯಗಳಲ್ಲಿ ಪ್ರತೀ ದಿನ ನಡೆಯುವ ಧಾರ್ಮಿಕ ಅನ್ನ ಸಂತರ್ಪಣೆಗೆ ಅಧಿಕಾರಿಗಳು ಅಡ್ಡಿಪಡಿಸಬಾರದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ದೇವಾಲಯಕ್ಕೆ ಭಕ್ತನಾಗಿ ಹೋಗಲು ಮಾತ್ರ ಅವಕಾಶವಿದೆ. ಆದರೆ ಮತದಾರರಿಗೆ ಅನ್ನ ಸಂತರ್ಪಣೆ ಏರ್ಪಡಿಸಿದಲ್ಲಿ ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ದಾಖಲಿಸಲಾಗುವುದು ಎಂದು ತಿಳಿಸಿದರು.
ಏಪ್ರಿಲ್ 13 ರಿಂದ ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗುವುದರಿಂದ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸಬೇಕು. ಸಂಬಂಧಿಸಿದ ಚುನಾವಣಾಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ, ಲಗತ್ತು ದಾಖಲೆಗಳನ್ನು ಕ್ರಮಬದ್ಧವಾಗಿ ಜೋಡಿಸಿ ವಹಿಯಲ್ಲಿ ದಾಖಲಿಸಬೇಕು. ಕಚೇರಿಯಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ತರಬೇತಿ ನೀಡಿರುವ ವಿಡಿಯೋ ಗ್ರಾಫರ್‌ಗಳನ್ನು ನೇಮಕ ಮಾಡಿಕೊಳ್ಳಬೇಕು. ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾಧಿಕಾರಿಯ ಕಚೇರಿ ಸುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಬೇಕು ಎಂದು ನಾಮಪತ್ರ ಸ್ವೀಕರಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತುಮಕೂರು ವಿಶ್ವವಿದ್ಯಾನಿಲಯದ ನಾಹೀದಾ ಜಂಜಂ, ಮಧುಗಿರಿ ಉಪವಿಭಾಗಾಧಿಕಾರಿ ರಿಷಿ ಆನಂದ್, ತುಮಕೂರು ಉಪವಿಭಾಗಾಧಿಕಾರಿ ಹೆಚ್.ಶಿವಪ್ಪ, ತಹಶೀಲ್ದಾರ್ ಸಿದ್ದೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker