ತುಮಕೂರು : ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಮಹಾ ಶಿವಯೋಗಿಗಳವರ 5 ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಜ. 21 ರಂದು ಭಾನುವಾರ ಶ್ರೀಮಠದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ ತಿಳಿಸಿದರು.
ಶ್ರೀ ಕ್ಷೇತ್ರದ ಆಡಳಿತ ಕಚೇರಿ ಸಭಾಂಗಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಅಂದು ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ತೋಂಟದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು, ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆಸ್ಪತ್ರೆ ಉದ್ಘಾಟನೆ ನೆರವೇರಿಸುವರು.
ಅರಣ್ಯ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಸ್ಮೃತಿವನ ಉದ್ಘಾಟಿಸುವರು. ಸಹಕಾರ ಖಾತೆ ಸಚಿವ ಕೆ.ಎನ್. ರಾಜಣ್ಣ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರೆವೇರಿಸುವರು. ಭಾರಿ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಎಂ.ಬಿ. ಪಾಟೀಲ್ ಸ್ನಾತಕೋತ್ತರ ವಿಭಾಗದ ಕಟ್ಟಡ ಉದ್ಘಾಟಿಸುವರು.
ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಸತಿ ಗೃಹಗಳ ನೂತನ ಕಟ್ಟಡ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಮುಖ್ಯಮಂತ್ರಿಗಳ ಸಲಹೆಗಾರರಾದ ಜಿ. ಆರ್. ಪಾಟೀಲ್, ತುಮಕೂರು ಸಂಸದ ಜಿ.ಎಸ್. ಬಸವರಾಜು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಶಾಸಕರುಗಳಾದ ಹೆಚ್. ಸಿ. ಬಾಲಕೃಷ್ಣ, ಬಿ. ಸುರೇಶ್ ಗೌಡ, ಬಿ.ಜಿ .ಜ್ಯೋತಿ ಗಣೇಶ್, ಎನ್. ಶ್ರೀನಿವಾಸ್ ರವರು ಉಪಸ್ಥಿತರಿರುವರು ಎಂದು ವಿವರಿಸಿದರು.
ಅಂದು ಬೆಳಗ್ಗೆ 7 ಗಂಟೆಯಿಂದ 11 ಗಂಟೆವರೆಗೆ ಉಪಹಾರ. ನಂತರ 11:30 ರಿಂದ ರಾತ್ರಿ 11 ರವರೆಗೂ ಒಟ್ಟು 6 ಕಡೆ ಊಟದ ವ್ಯವಸ್ಥೆ ಮಾಡಲಾಗಿದ್ದು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ನಾಡಿನ ವಿವಿಧ ಭಾಗದಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಎಷ್ಟೇ ಜನ ಭಕ್ತಾದಿಗಳು ಬಂದರು ಊಟದ ವ್ಯವಸ್ಥೆ ಇದ್ದೇ ಇರುತ್ತದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಆಡಳಿತಾಧಿಕಾರಿ ವಿಶ್ವನಾಥಯ್ಯ ಮನವಿ ಮಾಡಿದ್ದಾರೆ. ಸಂಜೆ 4:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ.
ಪತ್ರಿಕಾ ಗೋಷ್ಠಿಯಲ್ಲಿ ಎಸ್ ಐ ಟಿ ಕಾಲೇಜಿನ ಆಡಳಿತ ಅಧಿಕಾರಿ ಶಿವಕುಮಾರಯ್ಯ, ಸಿದ್ದಗಂಗಾ ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ ಹಾಜರಿದ್ದರು.