ತುಮಕೂರು : ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ಆಚರಿಸಲಾದ ದಸರಾ ಉತ್ಸವದ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ ೫ ಗ್ಯಾರಂಟಿಗಳ ಜೊತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು ನಿರ್ದೇಶಿಸಿದರು.
ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಹಾಗೂ ಜಿಲ್ಲೆಯ ಹೆಸರಾಂತ ಸಾಹಿತಿ ಹಾಗೂ ಕವಿಗಳ ಭಾವಚಿತ್ರದೊಂದಿಗೆ ಸಮಾಜಮುಖಿ ಚಿಂತನೆಯುಳ್ಳ ಅವರ ಬರಹದ ಸಾಲುಗಳ ಘೋಷ ವಾಕ್ಯಗಳ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದವರ ಪರಿಚಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ಅಂದು ಬೆಳಿಗ್ಗೆ ೭.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಹಾಜರಿರಬೇಕು. ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಿಂದ ಪ್ರಾರಂಭಗೊಂಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದು ತಿಳಿಸಿದರು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಧ್ವಜಸ್ತಂಭ, ಗೌರವರಕ್ಷೆ ಸ್ವೀಕಾರ ಸೇರಿದಂತೆ ಕಾರ್ಯಕ್ರಮ ನಡೆಸಲು ಅಗತ್ಯ ವೇದಿಕೆ, ಗಣ್ಯರಿಗೆ ಆಸನ ವ್ಯವಸ್ಥೆ, ಅಲಂಕಾರಿಕ ಹೂಕುಂಡಗಳ ವ್ಯವಸ್ಥೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮ ಸಂಘಟಿಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಜಿಲ್ಲೆಯ ಎಲ್ಲಾ ಸಾಹಿತಿ, ಕಲಾವಿದರುಗಳಿಗೆ, ಜನಪ್ರತಿನಿಧಿಗಳಿಗೆ, ವಿಶೇಷ ಆಹ್ವಾನಿತರಿಗೆ ಮುಂಚಿತವಾಗಿ ಆಹ್ವಾನ ಪತ್ರವನ್ನು ಸಿದ್ಧಪಡಿಸಿ ತಲುಪಿಸುವ ಕೆಲಸವನ್ನು ನಿರ್ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದರು.
ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಅಧಿಕಾರಿಗಳು/ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಹಿರಿಮೆ-ಗರಿಮೆಗಳನ್ನು ಸಾರುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು/ ಅಧೀನ ಅಧಿಕಾರಿಗಳು/ಸಿಬ್ಬಂದಿಗಳು ತಪ್ಪದೇ ಹಾಜರಾಗಲು ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.